ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಮೃತ್ಯು
ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಒಂದೇ ವಾರದಲ್ಲಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ರಾಜವಂತಿ ಗ್ರಾಮದ ಅಂಜಲಿ (25), ಬ್ಯಾಡನೂರು ಗ್ರಾಮದ ನರಸಮ್ಮ (40) ಹಾಗೂ ವೀರಲಗೊಂದಿ ಗ್ರಾಮದ ಅನಿತಾ (30) ಮೃತ ದುರ್ದೈವಿಗಳು.
ತುಮಕೂರು ಜಿಲ್ಲೆಯ ಪಾವಗಡ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಈ ಮೂವರು ಫೆ.22 ರಂದು ಸಂತಾನಹರಣ ಶಸ್ತ್ರಚಿಕಿತ್ಸೆಯನ್ನು ಮಾಡಿಸಿಕೊಂಡಿದ್ದರು. ಆ ದಿನವೇ ಅನಿತಾ ಫೆ.22 ರಂದು ಮೃತಪಟ್ಟರೆ, ಫೆ.24ರಂದು ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯಲ್ಲಿ ಅಂಜಲಿ ಹಾಗೂ ನರಸಮ್ಮ ಎಂಬುವವರು ಫೆ.25ರಂದು ಮೃತಪಟ್ಟಿದ್ದಾರೆ.
ವೈದ್ಯರ ನಿರ್ಲಕ್ಷ್ಯದಿಂದಲೇ ಮೂವರು ಮಹಿಳೆಯರು ಮೃತಪಟ್ಟಿರುವ ಆರೋಪ ಕೇಳಿ ಬಂದಿದೆ. ಘಟನೆಗೆ ಸಂಬಂಧಿಸಿ ಕುಟುಂಬಸ್ಥರು ಪಾವಗಡ ಪಟ್ಟಣದ ಬಳ್ಳಾರಿ ರಸ್ತೆ ತಡೆದು, ಅಡ್ಡಲಾಗಿ ಮಲಗಿ ಪ್ರತಿಭಟನೆ ನಡೆಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮವಾಗಬೇಕು, ಮೃತರ ಕುಟುಂಬಸ್ಥರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಪಾವಗಡ ತಹಶೀಲ್ದಾರ್, ತಾಲೂಕು ವೈದ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.